ಅ.22ರ ಗುರುವಾರ ದ.ಕ. ಜಿಲ್ಲೆಯ ಶಾಲೆಗಳಿಗೆ ರಜೆ: ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಅಕ್ಟೋಬರ್ 22ರಂದು ರಜೆ ಘೋಷಣೆಯಾಗುವ ಸಾಧ್ಯತೆ
ಮಂಗಳೂರು, ಅ.21: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಅಕ್ಟೋಬರ್ 22ರ ಗುರುವಾರದಂದು ರಜೆ ಘೋಷಿಸುವ ಸಾಧ್ಯತೆಯಿದ್ದು, ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ. ನವರಾತ್ರಿ ಉತ್ಸವದ ಕೊನೆಯ ದಿನವಾದ ಅಕ್ಟೋಬರ್ 21ರಂದು ತಡರಾತ್ರಿಯವರೆಗೆ ಕಾರ್ಯಕ್ರಮವಿರುವ ಕಾರಣ ವಿದ್ಯಾರ್ಥಿಗಳಿಗೆ ಮರುದಿನ (ಅ.22) ಶಾಲೆಗೆ ತೆರಳಲು ಸಮಸ್ಯೆಯಾಗಲಿದೆ.
ಈ ಬಗ್ಗೆ ಪರಿಶೀಲಿಸುವಂತೆ ಸಾರ್ವಜನಿಕರು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರ ಗಮನ ಸೆಳೆದಿದ್ದರು. ಇದರ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಜರುಗಿಸುವಂತೆ ಸಚಿವ ಖಾದರ್ ಅವರು ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದು, ಅದರಂತೆ ಅ.22ರ ಗುರುವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಖಾಸಗಿ ಹಾಗೂ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಲು ಜಿಲ್ಲಾಧಿಕಾರಿ ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.

